SHARE

ಬೆಂಗಳೂರು: ಕಾವೇರಿ ವಿವಾದದಲ್ಲಿ ತೀರ್ಪು ನೀಡಿರುವ ಸುಪ್ರೀಂಕೋರ್ಟ್ ನದಿ ನೀರು ಯಾವ ರಾಜ್ಯದ ಸ್ವತ್ತೂ ಅಲ್ಲ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಮಹದಾಯಿ ವಿವಾದದಲ್ಲೂ ಕರ್ನಾಟಕಕ್ಕೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ.

ಜಂಟಿ ಅಧಿವೇಶನದಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಅಭಿಪ್ರಾಯ ಆಧರಿಸಿ ಹೇಳುವುದಾದರೆ ಮಹದಾಯಿ ನೀರು ನಮ್ಮದು ಎಂದು ಗೋವಾ ವಾದಿಸಲು ಆಗುವುದಿಲ್ಲ. ಆದ್ದರಿಂದ ಕರ್ನಾಟಕ ತನ್ನ ಪಾಲಿನ ನೀರು ಪಡೆದುಕೊಳ್ಳಲು ಅನುಕೂಲವಾಗಲಿದೆ. ಮಹದಾಯಿ ವಿಷಯದಲ್ಲೂ ನಮಗೆ ನ್ಯಾಯ ಸಿಗದಲಿದೆ ಎಂದು ಹೇಳಿದರು.ಕಾವೇರಿ ವಿವಾದದಲ್ಲಿ ಸುಪ್ರೀಂಕೋರ್ಟ್ ತೀರ್ಪಿನಿಂದ ಆ ಭಾಗದ ಜನ ನಿಟ್ಟುಸಿರು ಬಿಡುವಂತಾಗಿದೆ. ಸಮರ್ಥವಾದ ಮಂಡಿಸಿದ ವಕೀಲರ ತಂಡವನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು. ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಧ್ವನಿಗೂಡಿಸಿ. ಪ್ರತಿ ಹಂತದ ಸರ್ವಪಕ್ಷ ಸಭೆಯಲ್ಲಿ ವಕೀಲರ ತಂಡ ಕೆಲಸ ಮಾಡುತ್ತಿಲ್ಲ ಎಂದು ನಾವು ಟೀಕೆ ಮಾಡುತ್ತಿದ್ದೆವು. ಆದರೆ, ಅಂತಿಮ ತೀರ್ಪಿನಲ್ಲಿ ರಾಜ್ಯಕ್ಕೆ ನ್ಯಾಯ ಸಿಕ್ಕಿದೆ. ಹೀಗಾಗಿ ವಕೀಲರ ತಂಡವನ್ನು ನಾವು ಅಭಿನಂದಿಸುತ್ತೇವೆ ಎಂದು ಹೇಳಿದರು.

ಕಾವೇರಿ ವಿಷಯದಲ್ಲಿ ಯಾರೂ ರಾಜಕೀಯ ಮಾಡಿಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡಿದರು. ಆದರೆ ಮಹದಾಯಿ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.