SHARE

ಬಳ್ಳಾರಿ: ಸಚಿವ ರಮೇಶ್‌ ಜಾರಕಿಹೊಳಿ ಅವರು ಸಚಿವ ಡಿ.ಕೆ ಶಿವಕುಮಾರ್ ವಿರುದ್ಧ ಮತ್ತೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಸಚಿವ ಶಿವಕುಮಾರ್ ಶೋ ಮಾಡೋದು ಬಿಟ್ಟು ಕೆಲಸ ಮಾಡಲಿ ಎಂದು ಹೇಳಿದ್ದಾರೆ. ಬಳ್ಳಾರಿ ಜಿಲ್ಲೆಯ ಕೂಡ್ಲಿಗಿಯಲ್ಲಿ ಮಾತನಾಡಿದ ಅವರು ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರಕ್ಕೆ ಅಕ್ಷೇಪ ಇದಿದ್ರೇ ಅದನ್ನ ಕ್ಯಾಬಿನೆಟ್‌ನಲ್ಲಿ ಚರ್ಚೆ ನಡೆಯುತ್ತಿದ್ದಾಗ ಹೇಳಬಹುದಿತ್ತು. ಈಗ ಬಹಿರಂಗವಾಗಿ ಹೇಳಿಕೆ ನೀಡಿದ್ದು ಸಮಂಜಸವಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ಗೂಬೆ ಕೂರಿಸಲು ಈ ರೀತಿ ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿ.ಕೆ ಶಿವಕುಮಾರ್ ಹಿಂಬಾಲಕರಾದ ಲಕ್ಷ್ಮೀ ಹೆಬ್ಟಾಳ್ಕರ್‌ ಸಹ ಪ್ರತ್ಯೇಕ ಧರ್ಮದ ಬಗ್ಗೆ ಮಾತನಾಡುವಾಗ ಡಿ.ಕೆ. ಶಿವಕುಮಾರ್‌ ಎಲ್ಲಿಗೆ ಹೋಗಿದ್ದರು.? ಪ್ರತಿ ಸಭೆಯಲ್ಲೂ ಧರ್ಮದ ವಿಚಾರವಾಗಿ ಮಾತನಾಡುವಾಗ ಹೆಬ್ಟಾಳ್ಕರ್‌ ತಡೆಯಲು ಏಕೆ ಪ್ರಯತ್ನಿಸಲಿಲ್ಲ ಎಂದು ಪ್ರಶ್ನಿಸಿದರು.

ಮಾಜಿ ಸಚಿವ ಎಂ.ಬಿ. ಪಾಟೀಲ್‌ ಅವರು ಡಿ.ಕೆ ಶಿವಕುಮಾರ್ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದು, ಎಂ.ಬಿ ಪಾಟೀಲರಿಗೆ ನಮ್ಮ ಬೆಂಬಲವಿದೆ ಎಂದ ಅವರು, ಸಚಿವ ಡಿ.ಕೆ. ಶಿವಕುಮಾರ್‌ ಅವರು ಶೋ ಮಾಡುವುದನ್ನು ಬಿಟ್ಟು, ಮಾಡಬೇಕಾದ ಕೆಲಸ ಮಾಡಿದರೆ ಒಳ್ಳೆಯದು ಎಂದು ಹೇಳಿದ್ದಾರೆ.

ಬಳ್ಳಾರಿ ಉಪಚುನಾವಣೆಯಲ್ಲಿ ಶಾಸಕ ನಾಗೇಂದ್ರ ಸಹೋದರ ವೆಂಕಟೇಶ್‌ ಪ್ರಸಾದ್‌ಗೆ ಟಿಕೆಟ್‌ ನೀಡುವಂತೆ ಒತ್ತಾಯಿಸಲಾಗಿತ್ತು. ಆದರೆ, ಟಿಕೆಟ್‌ ಕೈತಪ್ಪಿದೆ. ಯಾರ ಕುತಂತ್ರದಿಂದ ಕೈ ತಪ್ಪಿತೋ ಗೊತ್ತಿಲ್ಲ. ಆದರೂ ಪಕ್ಷ ನನಗೆ ಕೂಡ್ಲಿಗಿ ಜವಾಬ್ದಾರಿ ನೀಡಿದೆ ಅದನ್ನು ‌ನಿಭಾಯಿಸುತ್ತೇನೆ ಎಂದು ತಿಳಿಸಿದ್ದಾರೆ.