SHARE

ಬೆಳಗಾವಿ: ಬೆಳೆಹಾನಿಗೆ ದೇಶದಲ್ಲಿಯೇ ಮೊದಲ ಬಾರಿಗೆ ಅತೀ ಹೆಚ್ಚು ಪರಿಹಾರವನ್ನು ನೀಡಲಾಗುತ್ತಿದೆ. ಒಣ ಹಾಗೂ ನೀರಾವರಿ ಆಶ್ರಿತ ಬೆಳೆಗಳಿಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಹತ್ತು ಸಾವಿರ ರೂಪಾಯಿ ನೀಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸಂಜೆ ಸುದ್ದಿಗಾರರ ಜತೆ ಅವರು ಮಾತನಾಡಿದರು.

ಒಣ ಬೇಸಾಯದ ಬೆಳೆಗೆ ಮೊದಲು 6 ಸಾವಿರ ಹಾಗೂ ನೀರಾವರಿ ಬೆಳೆಗೆ 13 ಸಾವಿರ ರೂಪಾಯಿ ಪರಿಹಾರ ನೀಡಲಾಗುತ್ತಿತ್ತು. ಇದೇ ಮೊದಲ ಸಲ 10 ಸಾವಿರ ರೂಪಾಯಿ ಹೆಚ್ಚುವರಿಯಾಗಿ ನೀಡಲಾಗುವುದು ಎಂದರು. ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಮನೆ ನಿರ್ಮಿಸಲು ಈಗಾಗಲೇ 5 ಲಕ್ಷ ರೂಪಾಯಿ ಘೋಷಿಸಲಾಗಿದ್ದು, ಇಷ್ಟೊಂದು ಪರಿಹಾರ ನೀಡುತ್ತಿರುವುದು ಕೂಡ ಇದೇ ಮೊದಲ ಬಾರಿ ಎಂದರು.

ಔರಾದಕರ ವರದಿ ಶೀಘ್ರ ಜಾರಿ: ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಔರಾದಕರ ವರದಿಯನ್ನು ತಕ್ಷಣ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಉತ್ತರ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಘೋಷಿಸುವ ಬಗ್ಗೆ ಚರ್ಚೆ ನಡೆದಿದ್ದು, ಸಮಗ್ರವಾಗಿ ಚರ್ಚಿಸಿದ ಬಳಿಕ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಮಹಾರಾಷ್ಟ್ರ ರಾಜ್ಯದ ಪ್ರವಾಸದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಸಂಜೆ ನಗರಕ್ಕೆ ಆಗಮಿಸಿದರು. ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಅವರನ್ನು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಲಾಯಿತು. ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡರು. ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ, ಶಾಸಕರಾದ ಅಭಯ್ ಪಾಟೀಲ, ಅನಿಲ್ ಬೆನಕೆ, ಮಹಾದೇವಪ್ಪ ಯಾದವಾಡ, ದುರ್ಯೋಧನ ಐಹೊಳೆ ಮತ್ತಿತರರು ಉಪಸ್ಥಿತರಿದ್ದರು.ಬೆಳಗಾವಿ ನಗರದ ಪ್ರವಾಸಿಮಂದಿರದಲ್ಲಿ ವಾಸ್ತವ್ಯ ಮಾಡಲಿರುವ ಮುಖ್ಯಮಂತ್ರಿಗಳು ಅ.16 ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲ್ಲೂಕಿನಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.