SHARE

ಬೆಳಗಾವಿ: ಲೋಕಸಭೆ, ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನ ಸಭಾ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಬಿಜೆಪಿ ಕಾರ್ಯಕಾರಿಣಿ ಸಭೆಗೆ ನಗರಕ್ಕೆ ಆಗಮಿಸಿದ್ದ ಅವರು, ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಜತೆ ಮಾತನಾಡಿ, ಉಪಚುನಾವಣೆ ನಡೆಯುವ ಈ ಮೂರು ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ. ಜತೆಗೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಕಮಲ ಪಕ್ಷವೇ ಅತೀ ಹೆಚ್ಚಿನ ಸ್ಥಾನ ಗಳಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಭಾನುವಾರ ಸಚಿವ ಸಂಪುಟ ವಿಸ್ತರಣೆ ಆಗಲಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಜತೆ ಚರ್ಚಿಸಲಾಗುವುದು. ಸಿಂಗ್ ಅವರು ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಪಕ್ಷವನ್ನು ಬಲಪಡಿಸುವ ಬಗ್ಗೆ ಮಾರ್ಗದರ್ಶನ ಮಾಡಲಿದ್ದಾರೆ ಎಂದು ಹೇಳಿದರು.